ಬೆಂಗಳೂರು, ಸೆ.7: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕ ರಾಜೇಶ್ ಹಿರಿಮನೆ ಅವರಿಗೆ ಹೈಕೋರ್ಟ್ನಿಂದ ದೊಡ್ಡ ಮಟ್ಟದ ಮಧ್ಯಂತರ ರಿಲೀಫ್ ಸಿಕ್ಕಿದೆ. ಈ ಕುರಿತು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಹೊಸನಗರದ ಕೆಳ ನ್ಯಾಯಾಲಯದಲ್ಲಿದ್ದ ಈ ಪ್ರಕರಣದ ಸಂಪೂರ್ಣ ವಿಚಾರಣಾ ಪ್ರಕ್ರಿಯೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿದೆ.
ಹೈಕೋರ್ಟ್ನ ಮಾನ್ಯ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿ ವಿಚಾರಣೆ ನಡೆಸಿ ಮಹತ್ವದ ಆದೇಶ ಹೊರಡಿಸಿದೆ. ಅರ್ಜಿದಾರ ರಾಜೇಶ್ ಹಿರಿಮನೆ ಅವರ ಪರವಾಗಿ ರಾಜ್ಯದ ಖ್ಯಾತ ಹಿರಿಯ ವಕೀಲ ಅರುಣ್ ಶ್ಯಾಮ್ ಅವರ ನೇತೃತ್ವದ ವಕೀಲರ ತಂಡವು ನ್ಯಾಯಾಲಯದಲ್ಲಿ ವಾದ ಮಂಡಿಸಿತು.
ಪಾಕಿಸ್ತಾನ ಸೇನಾ ಮುಖ್ಯಸ್ಥನ ಫೋಟೋವನ್ನು ಎಡಿಟ್ ಮಾಡಿ, ಅದಕ್ಕೆ ‘ONE AGENDA’ ಎಂದು ಬರೆದು ಫೇಸ್ಬುಕ್ನಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಲಾಗಿತ್ತು ಎಂದು ಆರೋಪಿಸಲಾಗಿತ್ತು.
ಈ ಸಂಬಂಧ ಹೊಸನಗರ ಹಾಗೂ ನಗರ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 353 (2)ರ ಅಡಿಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಈ ಪೊಲೀಸ್ ಎಫ್ಐಆರ್ ಹಾಗೂ ಹೊಸನಗರ ಕೆಳ ನ್ಯಾಯಾಲಯದ ಪ್ರಕ್ರಿಯೆಯನ್ನು ಪ್ರಶ್ನಿಸಿ ರಾಜೇಶ್ ಹಿರಿಮನೆ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಕೆಳ ನ್ಯಾಯಾಲಯದ ಪ್ರಕ್ರಿಯೆಗೆ ತಡೆ ನೀಡುವ ಮೂಲಕ ಅರ್ಜಿದಾರರಿಗೆ ಬಿಗ್ ರಿಲೀಫ್ ನೀಡಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



